Skip to content
Sunday, 4 October 2026 | ಸತ್ಯವೇ ಶಕ್ತಿ • Truth is Strength
ಕನ್ನಡEnglishहिन्दीతెలుగుதமிழ்മലയാളം
ಜನರ ಪರ ಜನರ ಧ್ವನಿ VOICE OF THE PEOPLE
9845085793 7349337989 Editor: editorbayalusimha@gmail.com
ನಿಜವನ್ನು ಬಯಲಿಗೊಳಿಸುವುದು ನಮ್ಮ ಧ್ಯೇಯ • Our Mission is to Expose the Truth

ಬಂಗಾರಪೇಟೆ: ಮಾಜಿ ಮುಖ್ಯಮಂತ್ರಿ ದಿವಂಗತ ಡಿ ದೇವರಾಜ.

Share

ಬಂಗಾರಪೇಟೆ: ಮಾಜಿ ಮುಖ್ಯಮಂತ್ರಿ ದಿವಂಗತ ಡಿ. ದೇವರಾಜ ಅರಸು ಅವರು ಹಿಂದುಳಿದ ವರ್ಗಗಳನ್ನು ಸಮಾಜದ ಮುಖ್ಯವಾಹಿನಿಗೆ ತರುವಲ್ಲಿ ಸಲ್ಲಿಸಿದ ಸೇವೆ ಹಾಗೂ ನವ ಸಮಾಜ ನಿರ್ಮಾಣದ ಅವರ ಆದರ್ಶಗಳು ಇಂದಿನ ಜನತೆಗೆ ಮಾದರಿಯಾಗಬೇಕು ಎಂದು ಗ್ರೇಡ್‌-2 ತಹಶೀಲ್ದಾರ್‌ ಹನ್ಸಾ ಮರಿಯಾ ಹೇಳಿದರು.

ನಗರದ ತಾಲೂಕು ಕಚೇರಿ ಸಭಾಂಗಣದಲ್ಲಿ ಗುರುವಾರ ತಾಲೂಕು ಆಡಳಿತ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಆಯೋಜಿಸಿದ್ದ ಡಿ. ದೇವರಾಜ ಅರಸು ಅವರ 111ನೇ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಸರ್ಕಾರಿ ರಾಷ್ಟ್ರೀಯ ಹಬ್ಬಗಳು ಹಾಗೂ ಮಹತ್ವದ ಜಯಂತಿ ಕಾರ್ಯಕ್ರಮಗಳಲ್ಲಿ ತಾಲೂಕು ಮಟ್ಟದ ಎಲ್ಲ ಅಧಿಕಾರಿಗಳು ಮತ್ತು ಸಿಬ್ಬಂದಿ ಕಡ್ಡಾಯವಾಗಿ ಭಾಗವಹಿಸುವುದು ಅವರ ಕರ್ತವ್ಯವಾಗಿದೆ. ಆದರೆ, ಅರಸು ಜಯಂತಿ ಕಾರ್ಯಕ್ರಮಕ್ಕೆ ಕೆಲವು ತಾಲೂಕು ಮಟ್ಟದ ಅಧಿಕಾರಿಗಳು ಯಾವುದೇ ಮಾಹಿತಿ ಅಥವಾ ಅನುಮತಿ ಪಡೆಯದೆ ಗೈರುಹಾಜರಾಗಿರುವುದು ಸರಿಯಲ್ಲ. ಸರ್ಕಾರಿ ಅಧಿಕಾರಿಗಳು ಸರ್ಕಾರದ ಆದೇಶಗಳನ್ನು ತಪ್ಪದೇ ಪಾಲಿಸುವ ಜವಾಬ್ದಾರಿ ಹೊಂದಿದ್ದಾರೆ ಎಂದು ಹೇಳಿದರು.

ಈ ಕುರಿತು ತಹಶೀಲ್ದಾರ್‌ ಅವರೊಂದಿಗೆ ಚರ್ಚಿಸಿ, ತಾಲೂಕು ಮಟ್ಟದ ಅಧಿಕಾರಿಗಳ ಸಭೆ ಕರೆದು ಸರ್ಕಾರಿ ಕಾರ್ಯಕ್ರಮಗಳಲ್ಲಿ ಅಧಿಕಾರಿಗಳು ಕಡ್ಡಾಯವಾಗಿ ಹಾಗೂ ಜವಾಬ್ದಾರಿಯಿಂದ ಭಾಗವಹಿಸುವ ಕುರಿತು ಸೂಕ್ತ ಅರಿವು ಮೂಡಿಸಲಾಗುವುದು ಎಂದರು.

ಜಿಲ್ಲಾ ಕೇಂದ್ರಗಳಲ್ಲಿ ರಾಷ್ಟ್ರೀಯ ಹಬ್ಬ ಹಾಗೂ ಜಯಂತಿ ಕಾರ್ಯಕ್ರಮಗಳು ಅದ್ದೂರಿಯಾಗಿ ನಡೆಯುವುದು ಸಹಜ. ಅದೇ ರೀತಿ ತಾಲೂಕು ಮಟ್ಟದಲ್ಲೂ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು, ಅಧಿಕಾರಿಗಳು ಹಾಗೂ ಸಂಘ-ಸಂಸ್ಥೆಗಳ ಪ್ರತಿನಿಧಿಗಳು ಪಾಲ್ಗೊಂಡು ಕಾರ್ಯಕ್ರಮಗಳನ್ನು ಅರ್ಥಪೂರ್ಣವಾಗಿ ಆಚರಿಸುವುದು ಸ್ವಾಗತಾರ್ಹ ಎಂದರು.

ಡಿ. ದೇವರಾಜ ಅರಸು ಅವರು ಹಿಂದುಳಿದ ವರ್ಗಗಳು, ಬಡವರು ಹಾಗೂ ಶೋಷಿತ ಸಮುದಾಯಗಳ ಸಾಮಾಜಿಕ ಮತ್ತು ಆರ್ಥಿಕ ಅಭಿವೃದ್ಧಿಗೆ ಹಲವು ಮಹತ್ವದ ಹೆಜ್ಜೆಗಳನ್ನು ಇಟ್ಟಿದ್ದರು. ಅವರ ಸಾಮಾಜಿಕ ನ್ಯಾಯದ ಪರಿಕಲ್ಪನೆ ಹಾಗೂ ನವ ಸಮಾಜ ನಿರ್ಮಾಣದ ಆಶಯಗಳನ್ನು ಮುಂದಿನ ಪೀಳಿಗೆಗೆ ತಲುಪಿಸುವ ಅಗತ್ಯವಿದೆ ಎಂದು ಹೇಳಿದರು.

ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕಿ ಎ. ಅನಿತಾ ಮಾತನಾಡಿ, ದೇವರಾಜ ಅರಸು ಅವರ ದೂರದೃಷ್ಟಿ ಹಾಗೂ ಸಾಮಾಜಿಕ ಕಾಳಜಿಯ ಫಲವಾಗಿ ಹಿಂದುಳಿದ ವರ್ಗಗಳ ಕಲ್ಯಾಣಕ್ಕಾಗಿ ಹಲವು ಯೋಜನೆಗಳು ಜಾರಿಯಲ್ಲಿವೆ. ಬಡವರಿಗೆ ಸ್ವಯಂ ಉದ್ಯೋಗ ಕೈಗೊಳ್ಳಲು ಆರ್ಥಿಕ ನೆರವು, ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ, ವಸತಿ ನಿಲಯ ಸೇರಿದಂತೆ ಹಲವು ಸೌಲಭ್ಯಗಳನ್ನು ಸರ್ಕಾರ ಒದಗಿಸುತ್ತಿದೆ. ಹಿಂದುಳಿದ ವರ್ಗಗಳ ಜನರು ಈ ಯೋಜನೆಗಳ ಸದುಪಯೋಗ ಪಡೆದುಕೊಂಡು ಆರ್ಥಿಕವಾಗಿ ಮತ್ತು ಶೈಕ್ಷಣಿಕವಾಗಿ ಪ್ರಗತಿ ಸಾಧಿಸಬೇಕು ಎಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಶಿರಸ್ದಾರ್ ಹುಚ್ಚರಾಯಪ್ಪ, ತಾಲೂಕು ಹಿಂದುಳಿದ ವರ್ಗಗಳ ಒಕ್ಕೂಟದ ಮುಖಂಡರಾದ ಕುಂಬಾರಪಾಳ್ಯ ಮಂಜುನಾಥ್, ಎಲ್. ರಾಮಕೃಷ್ಣ, ಕಾರಹಳ್ಳಿ ಚಿನ್ನಿವೇಂಕಟೇಶ್, ಬಿ. ಶ್ರೀನಿವಾಸ್, ಕೃಷ್ಣೇಗೌಡ, ಆದಿನಾರಾಯಣ, ಬಿ.ಟಿ. ಆನಂದ್ ಕುಮಾರ್, ಸಿದ್ದನಹಳ್ಳಿ ವೆಂಕಟೇಶಪ್ಪ, ಸೋಮಶೇಖರ್, ಹೀರಾಬಾಯಿ ರತನ್ ಸಿಂಗ್, ಬಿಸಿಎಂ ಇಲಾಖೆಯ ಪ್ರಭಾಮಣಿ, ಟಿ. ವೆಂಕಟೇಶಪ್ಪ, ಎಚ್.ಆರ್. ಪ್ರಶಾಂತ್, ಕೆ.ವಿ. ರಾಜೇಂದ್ರ ಹಾಗೂ ಮಂಜುನಾಥ್ ಸೇರಿದಂತೆ ಇಲಾಖೆಯ ಸಿಬ್ಬಂದಿ, ಮುಖಂಡರು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು

Written by

Bayalu Simha

Leave a Reply

Your email address will not be published. Required fields are marked *