Skip to content
Saturday, 3 October 2026 | ಸತ್ಯವೇ ಶಕ್ತಿ • Truth is Strength
ಕನ್ನಡEnglishहिन्दीతెలుగుதமிழ்മലയാളം
ಜನರ ಪರ ಜನರ ಧ್ವನಿ VOICE OF THE PEOPLE
9845085793 7349337989 Editor: editorbayalusimha@gmail.com
ನಿಜವನ್ನು ಬಯಲಿಗೊಳಿಸುವುದು ನಮ್ಮ ಧ್ಯೇಯ • Our Mission is to Expose the Truth

ಪಟ್ಟಣದ ಸ್ವಚ್ಛತೆ ಹಾಗೂ ಸಾರ್ವಜನಿಕರ ಆರೋಗ್ಯ ರಕ್ಷಣೆಯಲ್ಲಿ ಪೌರಕಾರ್ಮಿಕರ ಸೇವೆ ಅತ್ಯಂತ ಮಹತ್ವದ್ದಾಗಿದೆ.

Share

ವಿಜಯಪುರ: ಪಟ್ಟಣದ ಸ್ವಚ್ಛತೆ ಹಾಗೂ ಸಾರ್ವಜನಿಕರ ಆರೋಗ್ಯ ರಕ್ಷಣೆಯಲ್ಲಿ ಪೌರಕಾರ್ಮಿಕರ ಸೇವೆ ಅತ್ಯಂತ ಮಹತ್ವದ್ದಾಗಿದೆ. ದೇಶದ ಗಡಿಯನ್ನು ಕಾಯುವ ಸೈನಿಕರಂತೆ ಪೌರಕಾರ್ಮಿಕರು ಸಾರ್ವಜನಿಕರ ಆರೋಗ್ಯವನ್ನು ಕಾಪಾಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದಾರೆ ಎಂದು ವಿಜಯಪುರ ಪುರಸಭೆಯ ಮುಖ್ಯಾಧಿಕಾರಿ ಸತ್ಯನಾರಾಯಣ್ ಹೇಳಿದರು.
ಪುರಸಭಾ ಸಭಾಂಗಣದಲ್ಲಿ ನಡೆದ ಪೌರಕಾರ್ಮಿಕರ ದಿನಾಚರಣೆ ಕಾರ್ಯಕ್ರಮದಲ್ಲಿ ಮಹಾತ್ಮ ಗಾಂಧೀಜಿ, ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಹಾಗೂ ಹಸಿರು ಕ್ರಾಂತಿಯ ಹರಿಕಾರ, ಮಾಜಿ ಉಪಪ್ರಧಾನಿ ಡಾ. ಬಾಬು ಜಗಜೀವನ ರಾಮ್ ಅವರ ಭಾವಚಿತ್ರಗಳಿಗೆ ಪುಷ್ಪನಮನ ಸಲ್ಲಿಸಿ ಅವರು ಮಾತನಾಡಿದರು.
ನಿತ್ಯ ಪಟ್ಟಣದ ಸ್ವಚ್ಛತೆಗಾಗಿ ಶ್ರಮಿಸುತ್ತಿರುವ ಪೌರಕಾರ್ಮಿಕರನ್ನು ಗೌರವಿಸುವುದು ಪ್ರತಿಯೊಬ್ಬ ನಾಗರಿಕರ ಕರ್ತವ್ಯವಾಗಿದೆ. ಪೌರಕಾರ್ಮಿಕರು ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವ ಮೂಲಕ ಉನ್ನತ ಹುದ್ದೆಗಳನ್ನು ಅಲಂಕರಿಸಲು ಪ್ರೋತ್ಸಾಹಿಸಬೇಕು. ಜೊತೆಗೆ ತಮ್ಮ ಆರೋಗ್ಯ ಮತ್ತು ಸುರಕ್ಷತೆಯ ಬಗ್ಗೆಯೂ ಹೆಚ್ಚಿನ ಕಾಳಜಿ ವಹಿಸಬೇಕು ಎಂದು ಸಲಹೆ ನೀಡಿದರು.
ಸಾರ್ವಜನಿಕರು ನಿಷೇಧಿತ ಪ್ಲಾಸ್ಟಿಕ್ ಬಳಕೆಯನ್ನು ಸಂಪೂರ್ಣವಾಗಿ ತ್ಯಜಿಸಬೇಕು. ಮನೆಗಳಲ್ಲಿಯೇ ಹಸಿ ಕಸ ಮತ್ತು ಒಣ ಕಸವನ್ನು ಪ್ರತ್ಯೇಕವಾಗಿ ವಿಂಗಡಿಸಿ, ಮನೆ ಮುಂದೆ ಬರುವ ಪುರಸಭೆಯ ಕಸ ಸಂಗ್ರಹಣಾ ವಾಹನಕ್ಕೆ ನೀಡಬೇಕು. ಪರಿಸರ ಸಂರಕ್ಷಣೆ ಹಾಗೂ ಪಟ್ಟಣದ ಸ್ವಚ್ಛತೆಗೆ ಪ್ರತಿಯೊಬ್ಬರೂ ಆದ್ಯತೆ ನೀಡಬೇಕು ಎಂದು ಹೇಳಿದರು.
ಪುರಸಭೆ ಎಂಜಿನಿಯರ್ ಶೇಖರರೆಡ್ಡಿ ಮಾತನಾಡಿ, ಪಟ್ಟಣದ ಸ್ವಚ್ಛತೆ ಮತ್ತು ಪರಿಸರ ಸಂರಕ್ಷಣೆಯಲ್ಲಿ ಪೌರಕಾರ್ಮಿಕರ ಪಾತ್ರ ಅತ್ಯಂತ ಪ್ರಮುಖವಾಗಿದೆ. ನಾಗರಿಕರು ಕಸವನ್ನು ಎಲ್ಲೆಂದರಲ್ಲಿ ಎಸೆಯದೆ, ಕಸ ವಿಂಗಡಣೆ ಮಾಡಿ ಪೌರಕಾರ್ಮಿಕರಿಗೆ ಸಹಕರಿಸಬೇಕು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಪುರಸಭೆ ಆರೋಗ್ಯಾಧಿಕಾರಿ ಲಾವಣ್ಯ, ಕಂದಾಯ ವಿಭಾಗದ ಅಧಿಕಾರಿಗಳಾದ ಬಾಲಚಂದ್ರ, ಶಿವನಾಗೇಗೌಡ, ಲಿಂಗಣ್ಣ, ಶ್ರೀನಿವಾಸ್, ಸುನೀಲ್, ಮಮತಾ, ಪೃಥ್ವಿ, ಜನಾರ್ಧನ್, ರತ್ನಮ್ಮ, ಹೇಮಾ ಹಾಗೂ ಪೌರಕಾರ್ಮಿಕರಾದ ಅಪ್ಪಿ, ಕೃಷ್ಣಪ್ಪ, ಲಕ್ಷ್ಮಣ್, ಮಾರಪ್ಪ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Written by

Bayalu Simha

Leave a Reply

Your email address will not be published. Required fields are marked *